ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ (Dr. Mahesh joshi) ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-2 ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದಾರೆ.
ಮಹೇಶ್ ಜೋಶಿ ಅವರ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲ ಸಾಹಿತಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅಧಿಕಾರ ದುರುಪಯೋಗ, ಭ್ರಷ್ಟಾಚಾರ, ಬೈಲಾ ತಿದ್ದುಪಡಿಯಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಮಹೇಶ್ ಜೋಶಿ ಅವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಪ್ರೇಮಿಗಳು ಹಾಗೂ ಜನಪರ ಸಂಘಟನೆಗಳ ವೇದಿಕೆ ಸದಸ್ಯರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು.
ಕನ್ನಡ ಸಾಹಿತ್ಯ ಪರಿಷತ್, ನಾಡು, ನುಡಿ, ಸಂಸ್ಕೃತಿ ಉಳಿಸಲು ಕೆಲಸ ಮಾಡಬೇಕು. ಅಧಿಕಾರದಲ್ಲಿರುವ ಮಹೇಶ್ ಜೋಶಿ ಸರ್ವಾಧಿಕಾರಿ ಧೋರಣೆ, ದಬ್ಬಾಳಿಕೆ ಮೂಲಕ ಆಡಳಿತ ನಡೆಸುತ್ತಿದ್ದಾರೆ. ಪರಿಷತ್ತಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ. ಸರ್ವಾಧಿಕಾರಿ ಧೋರಣೆ ಹೊಂದಿರುವ ಮಹೇಶ್ ಜೋಶಿ ಅವರನ್ನು ಸರ್ಕಾರ ಕೂಡಲೇ ಅಧಿಕಾರದಿಂದ ಕೆಳಗಿಳಿಸಬೇಕು. ಸೂಕ್ತ ತನಿಖೆ ಕೈಗೊಂಡು, ಅವರಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆಯಬೇಕು ಎಂದು ಕೆಲ ಸಾಹಿತಿಗಳು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ.
ಈ ಸುದ್ದಿಯನ್ನೂ ಓದಿ | Karnataka Public Schools: ಸಿಎಸ್ಆರ್ ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ
ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಲಾಗಿತ್ತು. ಈ ಮೊದಲು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ. ಮೊಟ್ಟಮೊದಲ ಬಾರಿಗೆ ಸರ್ಕಾರ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಲಾಗಿತ್ತು.