ಬಾಗೇಪಲ್ಲಿ: ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದು ಪಂಚ ಗ್ಯಾರಂಟಿಗಳು ಬಡವರ ಪಾಲಿಗೆ ವರದಾನ ವಾಗಿವೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕಾಂಗ್ರೆಸ್ ಸರ್ಕಾರದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಾಗೇಪಲ್ಲಿ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿ ಗಳೊಂದಿಗೆ ಗ್ಯಾರಂಟಿಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಿಗೆ ಗುರುತಿನ ಚೀಟಿಗಳನ್ನು ವಿತರಿಸಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳು ಅರ್ಹರೆಲ್ಲರಿಗೂ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: Chikkaballapur News: ವಿಚಕ್ಷಣ ಜಾಗೃತ ದಳ ಸಿಬ್ಬಂದಿ ನೇಮಕಾತಿ ಸುತ್ತೋಲೆ ವಾಪಸ್ಸು ಪಡೆಯಲಿ : ಅತಿಥಿ ಉಪನ್ಯಾಸಕ ಸಂಘ ಆಗ್ರಹ
ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪದೇ ಇರಲು ಕಾರಣ ಕಂಡು ಹಿಡಿದು ಪರಿಶೀಲಿಸಿ ಅದಕ್ಕೆ ಪರಿಹಾರ ಕಲ್ಪಿಸಬೇಕೆಂದರು.ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಮಾಡಬೇಕು. ನಿರುದ್ಯೋಗ ಯುವಕ, ಯುವತಿ ಯರಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ, ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಉದ್ಧೇಶಕ್ಕಾಗಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳು ಪ್ರಪಂಚಕ್ಕೆ ಮಾದರಿ ಆಗಿದ್ದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ದಲ್ಲಿ ಕಳೆದ ಎರಡು ವರ್ಷಗಳಿಂದ ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆ ಮೂಲಕ 400 ಕೋಟಿ ರೂ ಹಣವನ್ನು ಕ್ಷೇತ್ರದ ಜನತೆಗೆ ಉಚಿತವಾಗಿ ನೀಡಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರದ ಬಡಜನತೆಗೆ ಒಳ್ಳೆಯದಾಗಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಇತಿಹಾಸದ ಸಾಧನೆ ಆಗಿದೆ ಎಂದು ಪಂಚ ಗ್ಯಾರಂಟಿಗಳ ಮಹತ್ವ ವನ್ನು ಬಣ್ಣಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಎಸ್.ನರೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪಂಚ ಗ್ಯಾರಂಟಿಗಳ ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಿ ಕಳೆದ ಎರಡು ವರ್ಷಗಳಿಂದ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿದೆ. ಬಹುತೇಕ ಹೆಣ್ಣು ಮಕ್ಕಳು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಶಿಕ್ಷಣ, ಕೃಷಿ ಸೇರಿದಂತೆ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರಚನೆ ಆಗಿರುವ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರು ಪ್ರತಿಯೊಂದು ಗ್ರಾಮ ಪಂಚಾಯತಿಗೆ ಬೇಟಿ ನೀಡಿ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರು ಸಮಿತಿ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ವತಿಯಿಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಆತ್ಮೀಯವಾಗಿ ಸನ್ಮಾನ ಮಾಡಿ ದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮನೀಷಾ ಎನ್ ಪತ್ರಿ, ತಾ.ಪಂ. ಇಒ ರಮೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸೋಮಶೇಖರ್, ಸುಬ್ಬರಾಮು, ಸಿ.ಆರ್.ರಮೇಶ್, ಸುಮಂಗಳಮ್ಮ, ಹುಬ್ಬಳಿ ಬಯ್ಯಪ್ಪ, ಮೂರ್ತಿ, ಶ್ರೀನಿವಾಸ್, ಡಿ.ಬಿ.ಆನಂದ್, ಮಂಜುನಾಥ, ಶ್ವೇತ, ಮಜಿಭ್, ಬಯ್ಯಾರೆಡ್ಡಿ, ರಾಘವೇಂಧ್ರ, ಸಂತೋಷ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.