ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಕುರಿತು ಸರ್ಕಾರದ ವೈಫಲ್ಯವನ್ನು ವಿಪಕ್ಷಗಳು ಟೀಕಿಸಿವೆ. ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ (Bengaluru Stampede) ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಸರ್ಕಾರದ ವಿರುದ್ಧ ಹಲವು ಪ್ರಶ್ನೆಗಳನ್ನು ಎತ್ತಿವೆ. ಕೇಂದ್ರ ಸಚಿವ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇಂದು ಸುದ್ದಿಗೋಷ್ಠಿ ನಡೆಸಿ ಸರ್ಕಾರ ಪ್ರಶ್ನೆಗಳನ್ನು ಕೇಳಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಲಾಗಿದೆ. ಇದೇ ಆಯುಕ್ತರು ಇದ್ದಾಗಲೇ ಹೊಸ ವರ್ಷ ಸಂಭ್ರಮಾಚರಣೆಯೂ ನಡೆದಿತ್ತಲ್ಲವೇ? ಆಗ ಯಶಸ್ವಿಯಾಗಿ ಭದ್ರತೆ ಹೊಣೆಗಾರಿಕೆ ವಹಿಸಿದ್ದರಲ್ಲವೇ? ಆದರೆ ಈಗ ಸರ್ಕಾರ ತನ್ನ ತಪ್ಪನ್ನು ಮುಚ್ಚಿಹಾಕಲು ಈ ರೀತಿ ಮಾಡುತ್ತಿದೆ ಎಂದು ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಅನಧಿಕೃತ ಕಾರ್ಯಕ್ರಮ ಎಂದು ಪೊಲೀಸರು ದಾಖಲಿಸಿದ ಎಫ್ಐಆರ್ನಲ್ಲಿ ಹೇಳಲಾಗಿದೆ. ಹಾಗಾದರೆ ಅನಧಿಕೃತ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿದ್ದೇಕೆ? ಎಂದು ಪ್ರಶ್ನೆ ಕೇಳಲಾಗಿದೆ.
ಪೊಲೀಸರನ್ನು ಅಮಾನತು ಮಾಡಿರುವುದು ನಾಟಕ ಅಷ್ಟೇ. ಐಪಿಎಲ್ ಕಪ್ ಗೆದ್ದಿದ್ದು ಆರ್ಸಿಬಿ, ಫೋಟೋಗೆ ಪೋಸ್ ಕೊಟ್ಟಿದ್ದು ಕೆಪಿಸಿಸಿ ತಂಡ. ಅಂಧ ಮುಖ್ಯಮಂತ್ರಿ, ಅಂಧ ರಾಜ್ಯ ಎಂದು ಅಶೋಕ್ ಕಿಡಿಕಾರಿದರು. ಸಿಎಂ ಸಿದ್ದರಾಮಯ್ಯ ಬ್ಯಾಟರ್, ಡಿಸಿಎಂ ಡಿಕೆ ಬೌಲರ್. ಹೇಗಾದರೂ ಮಾಡಿ ಸಿದ್ದರಾಮಯ್ಯರನ್ನು ರನೌಟ್ ಮಾಡಿಸಬೇಕು ಎಂಬುದು ಡಿಕೆ ಆಶೆ. ಆದರೆ ಹಿಟ್ ವಿಕೆಟ್ ಆಗಿದ್ದು ರಾಜ್ಯದ ಜನರು ಎಂದು ಅಶೋಕ್ ವಾಗ್ದಾಳಿ ನಡೆಸಿದರು.
ಈ ಸುದ್ದಿಯನ್ನೂ ಓದಿ: Bengaluru Stampede: ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರ ಬಂಧನ
ಈ ಘಟನೆಯ A1 ಆರೋಪಿ ಸಿಎಂ, A2 ಆರೋಪಿ ಡಿಸಿಎಂ, A3 ಆರೋಪಿ ಗೃಹ ಸಚಿವ ಎಂದು ಅಶೋಕ್ ಕಿಡಿ ಕಾರಿದ್ದಾರೆ. ಕಾರ್ಯಕ್ರಮಕ್ಕೆ ಅನುಮತಿ ಇರಲಿಲ್ಲ ಎನ್ನುತ್ತಾರೆ. ಹಾಗಾದರೆ, ಡಿಸಿಎಂ ಡಿಕೆ ಶಿವಕುಮಾರ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಟ್ರೋಫಿಗೆ ಮುತ್ತಿಕ್ಕಿ ಫೋಟೊಗೆ ಪೋಸ್ ಕೊಟ್ಟಿದ್ದು ಏಕೆ ಎಂದು ಅವರು ಪ್ರಶ್ನಿಸಿದರು. ಈಗಾಗಲೇ ಸರ್ಕಾರ ಆರ್ಸಿಬಿ ಮಾರ್ಕೆಟಿಂಗ್ ಹೆಡ್ ಸೇರಿದಂತೆ ನಾಲ್ವರನ್ನು ಬಂಧಿಸಿದೆ. ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.