ಗೋಕಾಕ್:
ಪಟ್ಟಣದ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗುತ್ತಿದ್ದು ಈ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸಾವಿರಾರು ಜನ ಜಾತ್ರೆಯಲ್ಲಿ ಪಾಲ್ಗೊಂಡ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಈ ಸಂಬಂಧ ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಸಂತೋಷ್ ಜಾರಕಿಹೊಳಿ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ಸಾವಿರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿದ್ದಾರೆ.