ಧಾರವಾಡ: ನಿರಂತರವಾಗಿ ಸುರಿದ ಬಾರೀ ಮಳೆಯಿಂದಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ಹುಬ್ಬಳ್ಳಿ ಧಾರವಾಡ ಬೈಪಾಸ್ ಹೆದ್ದಾರಿಯಲ್ಲಿ ಸಿಲುಕಿಕೊಂಡ ಪರಿಣಾಮ ಸುಮಾರು ಮೂರು ಘಂಟೆಗಳವರೆಗೆ ಸಂಚಾರ ಸ್ಥಗಿತಗೊಂಡಿರುವ ಘಟನೆ ನಡೆದಿದೆ.
ಇಲ್ಲಿನ ರಮ್ಯಾ ರೆಸಿಡೆನ್ಸಿ ಬಳಿ ನೀರಿನಲ್ಲಿ ಬಸ್ ಸಿಲುಕಿಕೊಂಡಿದ್ದು, ಟ್ರ್ಯಾಕ್ಟರ್ ಗಳ ಸಹಾಯದಿಂದ ಎಳೆಯುವ ಮೂಲಕ ಬಸ್ಸಿನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ಬಸ್ ಸಿಲುಕಿಕೊಂಡ ಹಿನ್ನಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಸ್ಥಗಿತಗೊಂಡಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡಿದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಕಳಪೆ ರಸ್ತೆಯಿಂದ ಬಸ್ ನೀರಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.
ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.