ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ (Kris Gopalakrishnan) ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ (IISC) ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 16 ಜನರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಕೇಸ್ಗೆ ಹೈಕೋರ್ಟ್ ತಡೆ ನೀಡಿದೆ. 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಜ. 27ರಂದು ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ (Karnataka High Court) ಈ ಪ್ರಕರಣಕ್ಕೆ ತಡೆ ನೀಡಿದೆ.
ಈ ಪ್ರಕರಣಕ್ಕೆ ತಡೆ ಕೋರಿ ಕ್ರಿಸ್ ಗೋಪಾಲಕೃಷ್ಣನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ಅಧ್ಯಾಪಕರಾಗಿದ್ದ ತನ್ನನ್ನು 2014ರಲ್ಲಿ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ ಸೇವೆಯಿಂದ ವಜಾಗೊಳಿಸಲಾಗಿದೆ. ಅಲ್ಲದೇ ಜಾತಿ ನಿಂದಿಸಿ, ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಸಣ್ಣ ದುರುಗಪ್ಪ ದೂರು ನೀಡಿದ್ದರು. ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008ರಿಂದ 2025ರವರೆಗೆ ಜಾತಿನಿಂದನೆ ನಡೆಸಿದ್ದಾರೆ ಎಂದೂ ದುರುಗಪ್ಪ ಆರೋಪಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ಗೆ ಮನವಿ ಮಾಡಿದ್ದರು.
ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸರು ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆ.ವಿ.ಎಸ್., ದಾಸಪ್ಪ, ಬಲರಾಮ್ ಪಿ., ಹೇಮಲತಾ ಮಹಿಷಿ, ಚಟ್ಟೋಪಾದ್ಯಾಯ ಕೆ., ಪ್ರದೀಪ್ ಡಿ. ಸಾವ್ಕಾರ್, ಮನೋಹರನ್ ಮತ್ತಿತರರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಸುದ್ದಿಯನ್ನೂ ಓದಿ: Kris Gopalakrishnan: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 17 ಜನರ ವಿರುದ್ಧ SC/ST ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು
ಯಾರು ಈ ಕ್ರಿಸ್ ಗೋಪಾಲಕೃಷ್ಣನ್ ?
ಗೋಪಾಲಕೃಷ್ಣನ್ ಅವರು ಇನ್ಫೋಸಿಸ್ನ ಸಹ-ಸಂಸ್ಥಾಪಕರಲ್ಲಿ ಒಬ್ಬರು ಮತ್ತು 2007ರಿಂದ 2011 ರವರೆಗೆ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು 2011ರಿಂದ 2014ರವರೆಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2011ರ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಗೋಪಾಲಕೃಷ್ಣನ್ ಅವರು ಓಕಿನಾವಾ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಟೆಕ್ನಾಲಜಿ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದಾರೆ ಮತ್ತು ಬೆಂಗಳೂರಿನ ಇಂಟರ್ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.